More

    ಮ.ಬೆಟ್ಟಕ್ಕೆ ಸುತ್ತೂರು ಸ್ವಾಮೀಜಿ ಭೇಟಿ

    ಹನೂರು: ಸುಸಜ್ಜಿತ ದಾಸೋಹ ಭವನವನ್ನು ನಿರ್ಮಿಸುವುದರ ಮೂಲಕ ಮ.ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವಂತೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರಿಗೆ ಸಲಹೆ ನೀಡಿದರು.
    ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಶ್ರೀ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

    ಇತ್ತೀಚಿನ ವರ್ಷಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಈ ದಿಸೆಯಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇನ್ನಷ್ಟು ಸೌಕರ್ಯಗಳು ಆಗಬೇಕಿದೆ. ಜತೆಗೆ ಪ್ರಸ್ತುತವಿರುವ ದಾಸೋಹ ಭವನದಲ್ಲಿ ಭಕ್ತರು ಕುಳಿತುಕೊಳ್ಳುವ ಆಸನ ವ್ಯವಸ್ಥೆ ಸಮರ್ಪಕವಾಗಿಲ್ಲ. ಅಲ್ಲದೆ ಪ್ರಸಾದ ಸ್ವೀಕರಿಸಲು ಹೆಚ್ಚು ಹೊತ್ತು ಕಾದು ನಿಲ್ಲಬೇಕಿದೆ. ಆದ್ದರಿಂದ ಧರ್ಮಸ್ಥಳದ ಮಂಜುನಾಥ, ಶಿರಡಿಯ ಸಾಯಿಬಾಬಾ, ಬೆಂಗಳೂರಿನ ಇಸ್ಕಾನ್ ದೇವಾಲಯ ಹಾಗೂ ತಿರುಪತಿಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಲ್ಪಿಸಿರುವ ದಾಸೋಹ ವ್ಯವಸ್ಥೆಯ ಬಗ್ಗೆ ತಿಳಿದು ಸುಸಜ್ಜಿತ ದಾಸೋಹ ಭವನವನ್ನು ನಿರ್ಮಿಸಬೇಕು ಎಂದು ತಿಳಿಸಿದರು. ಜತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಮುಂದುವರಿಸಿಕೊಂಡು ಹೋಗುವಂತೆ ಸಲಹೆ ನೀಡಿದರು.

    ಇದಕ್ಕೂ ಮುನ್ನಾ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 15ನೇ ಪ್ರಾಧಿಕಾರದ ಸಭೆ, ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಜತೆಗೆ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಿಸಿರುವ ಶ್ರೀ ಮಹದೇಶ್ವರ ಪ್ರತಿಮೆಯ ತಳ ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಯು ಇನ್ನೆರಡು ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶರತ್ ಚಂದ್ರ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ದೇಗುಲದ ಆಗಮಿಕ ಕರವೀರಸ್ವಾಮಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರರಿದ್ದರು.

    29 ಹನೂರು 2 ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶರತ್ ಚಂದ್ರ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಸರಸ್ವತಿ ಮತ್ತಿತತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts