ಮತದಾನ ಅರಿವು ಜಾಗೃತಿ ಜಾಥಾ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದಲ್ಲಿ ಶನಿವಾರ ಮತದಾನ ಜಾಗೃತಿ ಜಾಥಾ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಮುಂಭಾಗ ಜಿಪಂ ಸಿಇಒ ಲತಾ ಕುಮಾರಿ ಅವರು ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ ಉಳಿವಿಗೆ ಶ್ರಮಿಸುವ ನಿಟ್ಟಿನಲ್ಲಿ ಜನರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮತದಾನ ಜಾಗೃತಿಯನ್ನು ಉತ್ಸವದ ಮಾದರಿಯಲ್ಲಿ ಆಚರಿಸಲಾಗುತ್ತದೆ ಎಂದರು.

ಯುವಕರು, ಗಿರಿಜನರು ಹಾಗೂ ಇತರೆ ಹಿಂದುಳಿದ ವರ್ಗಗಳ ಜನರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಏ.18 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ತೆರಳಿ ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸಲಾಯಿತು. ತಾಪಂ ಇಒ ರಮೇಶ್ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.