More

  ಏ.26ರಂದು ಉಡುಪಿ-ಚಿಕ್ಕಮಗಳೂರಲ್ಲಿ ವೋಟಿಂಗ್

  ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
  ಶನಿವಾರದಿಂದಲೇ ಕ್ಷೇತ್ರದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನೀತಿ ಸಂಹಿತೆಯನ್ನು ಪ್ರತಿಯೊಂದು ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮಾ.28ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸಲು ಏ.4 ಕೊನೆಯ ದಿನ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.8ಕ್ಕೆ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ. ಏ.26ಕ್ಕೆ ಮತದಾನ ನಡೆಯಲಿದ್ದು, ಜೂ.4ಕ್ಕೆ ಮತ ಎಣಿಕೆ ನಡೆಯಲಿದೆ. ಜೂ.6ಕ್ಕೆ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯವಾಗುತ್ತವೆ ಎಂದು ಹೇಳಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಒಟ್ಟು 15,72,958 ಮತದಾರರಿದ್ದಾರೆ. ಕುಂದಾಪುರ, ಉಡುಪಿ, ಕಾಪು, ಕಾರ್ಕಳ ತಾಲೂಕುಗಳೂ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 8,12,157, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ 7,60,801 ಮತದಾರರಿದ್ದಾರೆ. ಕಡೂರು ಕ್ಷೇತ್ರ ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದು 2,07,134 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.
  ಜಿಲ್ಲೆಯಾದ್ಯಂತ ಪರವಾನಗಿ ಹೊಂದಿರುವ ಹತ್ತು ಸಾವಿರಕ್ಕೂ ಹೆಚ್ಚು ಬಂದೂಕುಗಳ ಸನ್ನದುದಾರರಿದ್ದು, ಬಂದೂಕುಗಳನ್ನು ತಮ್ಮ ವ್ಯಾಪ್ತಿಯ ಸಂಬಂಧಿಸಿದ ಪೊಲೀಸ್ ಠಾಣೆಗೆ ಕೂಡಲೇ ಒಪ್ಪಿಸುವಂತೆ ಸೂಚಿಸಿದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿಕನಕರಡ್ಡಿ ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts