ಕಾಮಗಾರಿ ವಿಳಂಬ ಡಿಸಿ ಅಸಮಾಧಾನ

ವಿಜಯವಾಣಿ ಸುದ್ದಿಜಾಲ ಶಹಾಪುರ
ನಗರದ ವಿವಿಧ ವಾರ್ಡ್​ಗಳಲ್ಲಿ ನಗರೋತ್ಥಾನ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು ವಿಳಂಬವಾಗಿ ಸಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರು ಗುರುವಾರ ನಗರದ ವಾರ್ಡ್​ ನಂ. 8 ಮತ್ತು 10ಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ನಗರಸಭೆಯಿಂದ 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳು ಅಪೂರ್ಣಗೊಂಡಿವೆ. ಅಲ್ಲದೆ ಇನ್ನೂ 14 ಕಾಮಗಾರಿಗಳು ಆರಂಭಗೊಂಡಿಲ್ಲ. ಸಧ್ಯ ಪ್ರಗತಿಯಲ್ಲಿರುವ ಕಾಮಗಾರಿಗಳು ಶೇ. 40 ಮಾತ್ರ ಪೂರ್ಣಗೊಂಡಿವೆ ಎಂದು ಕಿಡಿಕಾರಿದರು.

ನಗರಸಭೆ ಅಧಿಕಾರಿಗಳ ನಿರ್ಲಕ್ಷೃವೇ ಇದಕ್ಕೆ ಕಾರಣವಾಗಿದ್ದು, ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಗರದಲ್ಲಿ ಇನ್ನೂ ಅನೇಕ ಸಮಸ್ಯೆಗಳಿದ್ದು ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಮಸ್ಯೆ ಪರಿಹಾರಕ್ಕೆ ಮುಂದಾಗುವಂತೆ ತಾಕೀತು ಮಾಡಿದರು.

ಪೌರಾಯುಕ್ತ ಬಸವರಾಜ ಶಿವಪೂಜೆ, ಎಇಇ ಪೂಜಾರಿ, ಜೆಇ ಬಕ್ಕಪ್ಪ ಸೇರಿ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಇದ್ದರು