ಮುಂಡರಗಿ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯದಲ್ಲಿ ತಾಪಂ ಇಒ ವಿಶ್ವನಾಥ ಹೊಸಮನಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ಜರುಗಿತು.
ಇಒ ಮಾತನಾಡಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಪಜಾ, ಪಪಂ ಜನರಿಗಾಗಿ ಮಾತ್ರ ಬಳಸಬೇಕು. ಬೇರೆಡೆ ಬಳಕೆಯಾದ ಬಗ್ಗೆ ದೂರು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
2025-26ನೇ ಸಾಲಿನಲ್ಲಿ ಇನ್ನೂ ಯಾವುದೇ ಅನುದಾನ ಬಿಡುಗಡೆ ಆಗಿಲ್ಲ. ಬಿಡುಗಡೆಯಾದ ನಂತರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪ್ರಗತಿ ವರದಿ ತಿಳಿಸಿದರು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 42.47 ಲಕ್ಷ ರೂ. ಅನುದಾನ ನಿಗದಿಯಾಗಿದ್ದು, ಬಿಡುಗಡೆಯಾದ ನಂತರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿ ತಿಳಿಸಿದರು.
ಡಂಬಳ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಾಮಗಾರಿ ಮುಕ್ತಾಯಗೊಂಡಿದ್ದು ವಸತಿ ಶಾಲೆಯವರಿಗೆ ಹಸ್ತಾಂತರಗೊಂಡಿದೆ. ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಪ್ಲಾಸ್ಟರಿಂಗ್ ಕೆಲಸ ಮುಕ್ತಾಯಗೊಂಡಿದೆ ಎಂದು ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಉಪ ವಿಭಾಗದ ಅಧಿಕಾರಿಗಳು ತಿಳಿಸಿದರು.
ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದರಿಂದ ವಿಳಂಬ ಧೋರಣೆ ಸರಿಯಲ್ಲ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಇಒ ಎಚ್ಚರಿಸಿದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅರುಣಾ ಸೋರಗಾವಿ ಇತರರಿದ್ದರು.