

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ನಾಗಮಂಗಲ ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ. ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?: ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ? ಎಂದು ಸಚಿವ ಜೋಶಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ: ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.