

ನವದೆಹಲಿ: ದೇಶದಲ್ಲಿನ ಗಂಭೀರ ವಿಚಾರಗಳ ಬಗ್ಗೆ ಚರ್ಚೆಗೆ ಆಗ್ರಹಿಸಿದ ವಿರೋಧ ಪಕ್ಷದ ಸಂಸದರನ್ನು ಕಾರಣವಿಲ್ಲದೆ ಕಲಾಪದಿಂದ ಅಮಾನತು ಮಾಡಲಾಗಿದೆ. ಸಂಸದರನ್ನು ಸಂಸತ್ತಿನಿಂದ ಹೊರಹಾಕಿದರ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಮಂಗಳವಾರ ವಿರೋಧ ಪಕ್ಷದ ಸಂಸದರು ಸಂಸತ್ತಿನ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅನುಕರಿಸಿದ್ದರು. ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿ ವ್ಯಾಪಕ ಖಂಡನೆಗೆ ಗುರಿಯಾಗಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ನಾನು ನನ್ನ ಮೊಬೈಲ್ ಫೋನಿನಲ್ಲಿ ರೆಕಾರ್ಡ್ ಮಾಡಿದ್ದೇನೆ ಅಷ್ಟೇ. ಅದನ್ನು ಮಾಧ್ಯಮ ಹಾಗೂ ಬಿಜೆಪಿಯವರು ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಎಲ್ಲರೂ ನಮ್ಮ ನಡೆಯನ್ನು ಟೀಕಿಸುತ್ತಿದ್ದಾರೆ.
ಇದುವರೆಗೆ 150 ಸಂಸದರನ್ನು ಹೊರಹಾಕಲಾಗಿದೆ. ಆದರೆ, ಈವರೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ. ಅದಾನಿ ಮತ್ತು ರಫೇಲ್ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಿಲ್ಲ. ನಿರುದ್ಯೋಗ ಸೇರಿದಂತೆ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗೆ ಆಗ್ರಹಿಸಿದ ಸಂಸದರನ್ನು ಅಮಾನತು ಮಾಡಲಾಗುತ್ತಿದೆ. ಇದನ್ನು ಬಿಟ್ಟು ಬೇರೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.