

ನವದೆಹಲಿ: ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಶುರುವಾಗುವುದಕ್ಕೆ ತಿಂಗಳುಗಳು ಬಾಕಿ ಉಳಿದಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟದಿಂದ ಸಖತ್ ಸೌಂಡ್ ಮಾಡುತ್ತಿದೆ. ಏಕೆಂದರೆ ಈ ಬಾರಿಯ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುತ್ತಿರುವುದರಿಂದ ಭದ್ರತೆಯ ಕಾರಣದಿಂದಾಗಿ ಭಾರತ ತಂಡ ಭಾಗವಹಿಸುವುಡು ಡೌಟ್ ಎಂದು ಹೇಳಲಾಗಿದ್ದು, ಬಿಸಿಸಿಐ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ನಡೆಸುವಂತೆ ಐಸಿಸಿಗೆ ಮನವಿ ಮಾಡಿದೆ. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಭಾರತ ಪಾಕಿಸ್ತಾನದ ನೆಲದಲ್ಲಿ ಆಡಲೇಬೇಕು ಎಂದು ಆಗ್ರಹಿಸಿದೆ.
2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನ ಹಾಗೂ ಭಾರತ ನಡುವಿನ ಕಿತ್ತಾಟಕ್ಕೆ ಹೆಚ್ಚು ಸೌಂಡ್ ಮಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಪಾಕಿಸ್ತಾನದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ನೀಡುತ್ತಿರುವ ಹೇಳಿಕೆ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ಇದೀಗ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಯೂನಿಸ್ ಖಾನ್ ನೀಡಿರುವ ಹೇಳಿಕೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಕುರಿತು ಮಾತನಾಡಿರುವ ಯೂನಿಸ್ ಖಾನ್, ಭಾರತ ತಂಡವು ಪಾಕಿಸ್ತಾನಕ್ಕೆ ಬಂದು ಆಡಲಿದೆ ಎಂಬ ವಿಶ್ವಾಸ ನಮಗಿದೆ. ಎಂದಿನಂತೆ ವಿರಾಟ್ ಕೊಹ್ಲಿ ಪಾಕಿಸ್ತಾನಕ್ಕೆ ಬಂದು ತಮ್ಮ ಪ್ರದರ್ಶನವನ್ನು ನೀಡಬೇಕು. ಆತ ಪಾಕಿಸ್ತಾನದ ನೆಲದಲ್ಲಿ ಎಂದೂ ಆಡಿಲ್ಲ. ಆತ ಬಂದರೆ ನಮಗೆ ಸಂತೋಷವಾಗುತ್ತದೆ. ಭಾರತ ತಂಡ ಪಾಕಿಸ್ತಾನಕ್ಕೆ ಬಂದು ಆಡುವ ನಿರೀಕ್ಷೆ ನಮಗಿದೆ. ಇದು ಖಂಡಿತವಾಗಿಯೂ ಆಗುತ್ತದೆ ಎಂದು ಯೂನಿಸ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ, ಇತ್ತೀಚಿಗೆ ಕೊಲಂಬೊದಲ್ಲಿ ಮುಕ್ತಾಯಗೊಂಡ ಐಸಿಸಿ ವಾರ್ಷಿಕ ಸಭೆಯಲ್ಲಿ ಚಾಂಪಿಯನ್ಸ್ ಟ್ರೋಫಿ ವಿಚಾರವಾಗಿಯೂ ಮಾತುಕತೆ ನಡೆದಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿದ್ದು, ಐಸಿಸಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿರುವುದಾಗಿ ವರದಿಯಾಗಿದೆ. ಈವೆಂಟ್ ವೇಳಾಪಟ್ಟಿ ಹಾಗೂ ಬಜೆಟ್ಅನ್ನು ಪಿಸಿಬಿ ಸಲ್ಲಿಸಿದ್ದು, ಭಾರತದ ಪಂದ್ಯಗಳನ್ನು ಲಾಹೋರ್ನಲ್ಲಿ ನಡೆಸುವುದಾಗಿ ತಿಳಿಸಿದೆ. ಈ ಬಗ್ಗೆ ಐಸಿಸಿ ಚರ್ಚಿಸಿ ಆ ನಂತರ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದೆ ಎಂದು ವರದಿಯಾಗಿದೆ.