ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಿದ್ದರೆ.. ವಿಡಿಯೋ ತೆಗೆದ ಜನ!

women
Published on

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಾಂಡಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಕೆಲವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೊದಲ್ಲಿ, ಕೆಲವರು ಮಹಿಳೆ ಮೇಲೆ ಮನಬಂದಂತೆ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಆಕೆ ತನ್ನನ್ನು ರಕ್ಷಿಸುವಂತೆ ಪಕ್ಕದಲ್ಲಿದ್ದವರಿಗೆ ಮನವಿ ಮಾಡಿದ್ದಾಳೆ. ಆದರೆ ಪಕ್ಕದಲ್ಲಿದ್ದವರು ಆಕೆಯನ್ನು ರಕ್ಷಿಸುವ ಬದಲು ತಮ್ಮ ಮೊಬೈಲ್‌ನಲ್ಲಿ ಘಟನೆಯನ್ನು ಚಿತ್ರೀಕರಿಸಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸಚಿವೆಯಾಗಿ ನೇಮಕಗೊಂಡಿರುವ ಸಾವಿತ್ರಿ ಠಾಕೂರ್ ಅವರ ಕ್ಷೇತ್ರದಲ್ಲಿ ಈ ಘಟನೆ ನಡೆದಿರುವುದು ಗಮನಾರ್ಹ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ದಾಳಿಯ ಪ್ರಮುಖ ಶಂಕಿತನನ್ನು ಗಂಧವಾನಿ ಪ್ರದೇಶದ ನಿವಾಸಿ ನಿರ್ಸಿಂಗ್ ಎಂದು ಗುರುತಿಸಲಾಗಿದೆ. ಆದರೆ, ಈ ದಾಳಿಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಉಳಿದವರನ್ನು ಶೀಘ್ರವೇ ಬಂಧಿಸಲಾಗುವುದು. ಸಂತ್ರಸ್ತೆಗೆ ನ್ಯಾಯ ಸಿಗುವಂತೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ಕೆಲವರು ವೃದ್ಧ ದಂಪತಿಯನ್ನು ತೀವ್ರವಾಗಿ ಥಳಿಸಿ ಅವರ ಕುತ್ತಿಗೆಗೆ ಶೂ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ತಮ್ಮ ಮಗ ಹೆಣ್ಣುಮಕ್ಕಳನ್ನು ಹಿಂಬಾಲಿಸುತ್ತಿದ್ದ ಎಂಬ ಕಾರಣಕ್ಕೆ ಪೋಷಕರಿಗೆ ಈ ರೀತಿ ಶಿಕ್ಷೆ ವಿಧಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net