ನಿತ್ಯ ಕುಡಿದು ಬಂದು ಪತಿಯಿಂದ ಕಿರುಕುಳ; ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಪ್ರಾಣಬಿಟ್ಟ ಮಹಿಳೆ

Chikkodi Suicide
Published on

ಬೆಳಗಾವಿ: ಕುಡುಕ ಪತಿಯ ಕಾಟಕ್ಕೆ ಬೇಸತ್ತು ಮಹಿಳೆಯೊಬ್ಬರು (Women) ತಮ್ಮ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ನಡೆದಿದೆ. ನದಿಗೆ ಹಾರಿದ ಓರ್ವ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ತಾಯಿ ಹಾಗೂ ಇನ್ನಿಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತರನ್ನು ಶಾರದಾ ಡಾಲೆ(32) ಮಕ್ಕಳಾದ ಅಮೃತಾ(14), ಆದರ್ಶ(8) ಎಂದು ಗುರುತಿಸಲಾಗಿದ್ದು, ಅನುಕ್ಷಾ ಡಾಲೆಯನ್ನು ರಕ್ಷಿಸಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕುಡಚಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಹಿನ್ನೆಲೆ

ಮಹಿಳೆಯ ಪತಿ ಅಶೋಕ್ ಡಾಲೆ ಪ್ರತಿನಿತ್ಯ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ತೀವ್ರವಾಗಿ ಮನನೊಂದಿದ್ದ ಶಾರದಾ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು ನದಿಗೆ ಹಾರುತ್ತಿದ್ದುದ್ದನ್ನು ಗಮನಿಸಿದ ಸ್ಥಳೀಯರು ರಕ್ಷಿಸಲು ಮುಂದಾಗಿದ್ದು, ಓರ್ವ ಮಗುವನ್ನು ರಕ್ಷಿಸಿದ್ದಾರೆ.

ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಯಿ ಹಾಗೂ ಇಬ್ಬರು ಮಕ್ಕಳ ಶವವನ್ನು ನದಿಯಿಂದ ಹೊರತೆಗೆದಿದ್ದಾರೆ. ಪತಿ ಅಶೋಕ್​ನನ್ನು ಕುಡಚಿ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಕುಟುಂಬಸ್ಥರು ಮತ್ತು ಸಾರ್ವಜನಿಕರು ನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಗಂಡ ಅಶೋಕ ಡಾಲೆ ವಿರುದ್ಧ ಆಕ್ರೋಶ ಹೊರಹಾಕಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net