ಔರಾದ್: ಹಲವಾರು ವರ್ಷಗಳಿಂದ ನಿರಂತರವಾಗಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಿಪಿಐ ರಘುವೀರಸಿಂಗ್ ಠಾಕೂರ್ ಹೇಳಿದರು.
ಪಟ್ಟಣದ ಕನಕ ಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಹಿಳಾ ವಿಚಾರಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಬದುಕು ಸಾಗಿಸಲು ಸಶಕ್ತರನ್ನಾಗಿ ಮಾಡುವಲ್ಲಿ ಧರ್ಮಸ್ಥಳ ಸಂಸ್ಥೆ ಅನೇಕ ಕಾರ್ಯ ಕೈಗೊಳ್ಳುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆ ಮಾಡುತ್ತಿರುವ ಮಹಿಳೆ ಸಬಲೆಯೇ ಹೊರತು ಅಬಲೆಯಲ್ಲ. ಮಹಿಳೆಯರು ಯಾವುದೇ ಕಾರಣಕ್ಕೂ ಅಸ್ತಿತ್ವ ಕಳೆದುಕೊಳ್ಳದೆ ಸ್ವಾಭಿಮಾನದಿಂದ ಬದುಕಬೇಕೆಂದು ಹೇಳಿದರು.
ಕಮಲನಗರ ಎನ್‌ಆರ್‌ಎಲ್‌ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಕವಿತಾ ಬಿರಾದಾರ ವಿಶೇಷ ಉಪನ್ಯಾಸ ನೀಡಿದರು.
ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅನಿತಾ ಬಿರಾದಾರ, ಕಲಬುರಗಿ ಎಸ್‌ಕೆಡಿಆರ್‌ಡಿಪಿ ಜ್ಞಾನ ವಿಕಾಸ ಯೋಜನಾಧಿಕಾರಿ ಶಕುಂತಲಾ ಮಾತನಾಡಿದರು.
ಪಪಂ ಅಧ್ಯಕ್ಷೆ ಅಂಬಿಕಾ ಪವಾರ್, ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಮಲ್ಲಪ್ಪ ಗೌಡಾ, ಮಲ್ಲಿಕಾರ್ಜುನ, ರಾಘವೇಂದ್ರ ಗೌಡಾ, ಸಂಗೀತಾ, ಸಿದ್ರಾಮ ಇತರರಿದ್ದರು.
ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಗೌಡಾ ವಂದಿಸಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಅನೀಲ ದಾವಣಿ ನಿರೂಪಣೆ ಮಾಡಿದರು.