More

  ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಬರಲು ಶ್ರಮಿಸಿ

  ನಂಜನಗೂಡು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧನೆ ತೋರುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ.ಪಾಂಡು ಹೇಳಿದರು.

  ನಗರದ ಲಯನ್ಸ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ತಯಾರಿ ಕುರಿತಾಗಿ ಸೋಮವಾರ ಆಯೋಜಿಸಿದ್ದ ತಾಲೂಕಿನ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

  ಕಳೆದ ಬಾರಿ ಮೈಸೂರು ಜಿಲ್ಲೆ ರಾಜ್ಯದಲ್ಲಿ 16ನೇ ಸ್ಥಾನದಲ್ಲಿತ್ತು. ನಂಜನಗೂಡು ತಾಲೂಕು ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು. ಈ ಬಾರಿ ಮೈಸೂರು ಜಿಲ್ಲೆಯನ್ನು ಮೊದಲ ಅಗ್ರಮಾನ್ಯ ಐದರಲ್ಲಿ ಸ್ಥಾನ ಗಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ. ಹಾಗೆಯೇ ನಂಜನಗೂಡು ತಾಲೂಕು ಜಿಲ್ಲೆಯಲ್ಲಿ ಮೊದಲ ಸ್ಥಾನ ಗಳಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳನ್ನು ತಯಾರಿ ಮಾಡುವಂತೆ ಸೂಚಿಸಿದರು.

  ಈಗಾಗಲೇ ಉನ್ನತ ಶ್ರೇಣಿ, ಪ್ರಥಮ ದರ್ಜೆ, ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಬಹುದಾದ ವಿದ್ಯಾರ್ಥಿಗಳ ವಿವರವನ್ನು ಕಲೆ ಹಾಕಲಾಗಿದೆ. ಅಂತಹ ವಿದ್ಯಾರ್ಥಿಗಳನ್ನು ಮತ್ತಷ್ಟು ಹೆಚ್ಚಿನ ಅಂಕ ಪಡೆಯಲು ಉತ್ತೇಜನ ನೀಡಬೇಕು. ಇನ್ನು ಕನಿಷ್ಠ ಅಂಕಗಳಿಂದ ಉತ್ತೀರ್ಣ ಅಥವಾ ಅನುತ್ತೀರ್ಣರಾಗಬಹುದಾದ ವಿದ್ಯಾರ್ಥಿಗಳ ಪಟ್ಟಿಯನ್ನು ಕೂಡ ಮಾಡಲಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅಂತಹವರು 1,168 ವಿದ್ಯಾರ್ಥಿಗಳಿದ್ದಾರೆ. ಇಂತಹ ವಿದ್ಯಾರ್ಥಿಗಳ ಮೇಲೆ ವಿಶೇಷ ಕಾಳಜಿ ತೋರಿ ವ್ಯಾಸಂಗದಲ್ಲಿ ಹೆಚ್ಚಿನ ಪ್ರಗತಿ ತೋರುವ ನಿಟ್ಟಿನಲ್ಲಿ ಶಿಕ್ಷಕರು ನೆರವಾಗಬೇಕು. ಯಾವ ವಿದ್ಯಾರ್ಥಿಯೂ ಅನುತ್ತೀರ್ಣರಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಶಿವಲಿಂಗಯ್ಯ ಮಾತನಾಡಿ, ತಾಲೂಕಿನ 70 ಪ್ರೌಢಶಾಲೆಗಳಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 4,760 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದರಲ್ಲಿ 2,416 ಗಂಡು ಹಾಗೂ 2,340 ಹೆಣ್ಣು ಮಕ್ಕಳಿದ್ದಾರೆ. ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಕರಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದರು.

  ಸಭೆಯಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಬಾಲರಾಜು, ಅಕ್ಷರ ದಾಸೋಹ ಸಹ ನಿರ್ದೇಶಕ ಡಾ.ಬಿ.ಮಲ್ಲಿಕಾರ್ಜುನಸ್ವಾಮಿ, ಎಸ್ಸೆಸ್ಸೆಲ್ಸಿ ಜಿಲ್ಲಾ ನೋಡಲ್ ಅಧಿಕಾರಿ ನಿರೂಪಾ ವೆಸ್ಲಿ, ತಾಲೂಕು ನೋಡಲ್ ಅಧಿಕಾರಿ ಎನ್.ಎಸ್.ರಮೇಶ್, ವಿಷಯ ಪರಿವೀಕ್ಷಕರಾದ ದೇವರಾಜು, ಕೆಂಪರಾಜು, ಪುಷ್ಪ ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts