ಕಾಂಗ್ರೆಸ್ ಗೆಲುವಿಗೆ ಶಕ್ತಿಮೀರಿ ಶ್ರಮಿಸಿ

2 Min Read
ಕಾಂಗ್ರೆಸ್ ಗೆಲುವಿಗೆ ಶಕ್ತಿಮೀರಿ ಶ್ರಮಿಸಿ
ಹಾರೋಹಳ್ಳಿ ಸಮೀಪದ ಹೊಸಿಲು ಮಾರಮ್ಮನ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿದರು. ಎ.ಎಲ್.ಕೆಂಪೂಗೌಡ, ಕೆನ್ನಾಳು ನಾಗರಾಜು, ಹರೀಶ್, ಮುರಳಿ, ಯೋಗೇಶ್ ಇತರರು ಇದ್ದರು.

ಪಾಂಡವಪುರ: ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಹೆಚ್ಚು ಮತ ಕೊಡಿಸುವ ನಿಟ್ಟಿನಲ್ಲಿ ರೈತಸಂಘ ಮತ್ತು ಸರ್ವೋದಯ ಕರ್ನಾಟಕ ಪಕ್ಷದ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದರು.

ಪಟ್ಟಣದ ಹಾರೋಹಳ್ಳಿ ಸಮೀಪದ ಹೊಸಿಲು ಮಾರಮ್ಮ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ರೈತ ಸಂಘ ಟೌನ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲು ಪಕ್ಷದ ಅಭ್ಯರ್ಥಿಯ ಗೆಲುವು ಸಹಕಾರಿಯಾಗಲಿದೆ. ಈ ಚುನಾವಣೆಯಲ್ಲಿ ಹಿನ್ನಡೆಯಾದರೆ ಕ್ಷೇತ್ರದ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗೆ ಹೋರಾಟ ಮಾಡಿದ ರೀತಿಯಲ್ಲೇ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.

ದೇಶದಲ್ಲಿ ಜಾತಿ ವ್ಯವಸ್ಥೆ ಇರುವಂತೆಯೇ ವಿದೇಶದಲ್ಲಿ ವರ್ಣ ವ್ಯವಸ್ಥೆ ಇದೆ. ಬಲಪಂಥೀಯ ಆಲೋಚನೆಯುಳ್ಳ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಅಭಿವೃದ್ಧಿ ಶೇ.30ರಷ್ಟು ಹಿಂದಕ್ಕೆ ಹೋಗುತ್ತದೆ. ಒತ್ತಡದಲ್ಲಿ ಕೆಲಸ ನಿರ್ವಹಿಸುವಾಗ ನನ್ನಿಂದಲೂ ತಪ್ಪು ಆಗಿರಬಹುದು. ಮುಂದೆ ಎಲ್ಲವನ್ನೂ ಸರಿಪಡಿಸಿಕೊಳ್ಳಲಾಗುವುದು. ಈ ಚುನಾವಣೆಯನ್ನು ಲಘುವಾಗಿ ಪರಿಗಣಿಸದೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಸಹಕಾರದೊಂದಿಗೆ ರೈತಸಂಘ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ವಿನಂತಿಸಿದರು.

ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ರಾಜ್ಯದಲ್ಲಿ ರೈತಸಂಘ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಒಗ್ಗೂಡಿ ಕೆಲಸ ಮಾಡುತ್ತಿದೆ. ಈ ಎಲ್ಲ ಸಂಘಟನೆಗಳು ಮತ್ತು ಚಳವಳಿಗಳನ್ನು ಉಳಿಸಿಕೊಳ್ಳಲು ಹೋರಾಟ ಅಗತ್ಯವಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಬೆಂಬಲಿಸಬೇಕಿದೆ ಎಂದು ಹೇಳಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಕೆನ್ನಾಳು ನಾಗರಾಜು ಮಾತನಾಡಿ, ಜಿಲ್ಲೆಯ ಇತಿಹಾಸದಲ್ಲಿ ಹೊರಗಿನವರು ಯಾರೂ ಗೆಲುವು ಕಂಡಿಲ್ಲ. ಹಿಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮತ ಚಲಾಯಿಸಿ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಅಂಬರೀಷ್ ಅವರನ್ನು ಗೆಲ್ಲಿಸಲಾಗಿತ್ತು. ಅದೇ ರೀತಿ ಈ ಚುನಾವಣೆಯಲ್ಲೂ ಹೊರಗಿನವರಿಗೆ ಅವಕಾಶ ಮಾಡಿಕೊಡಬಾರದು ಎಂದರು.

See also  ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ: ಪಾಗಲ್​ ಪ್ರೇಮಿಗೆ ಸಾರ್ವಜನಿಕರಿಂದ ಧರ್ಮದೇಟು!

ಸಭೆಯಲ್ಲಿ ರೈತಸಂಘ ಮುಖಂಡರಾದ ರಾಘವೇಂದ್ರ, ವಕೀಲ ಮುರಳಿ, ಹರೀಶ್, ಬೇವಿನಕುಪ್ಪೆ ಯೋಗೇಶ್, ಬೀರಶೆಟ್ಟಹಳ್ಳಿ ನಾಗೇಂದ್ರ, ಹಾಳಯ್ಯ, ಮಿಲ್ ಸಂತೋಷ್, ಕೆ.ಸಿ.ರಾಜು, ಎಣ್ಣೆಹೊಳೆಕೊಪ್ಪಲು ಮಂಜು, ರಘು ಇತರರು ಇದ್ದರು.

Share This Article