More

    ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

    ಶಿವಮೊಗ್ಗ: ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂಬರುವ ರಾಜ್ಯ ಬಜೆಟ್‌ನಲ್ಲಿ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಸಿಐಟಿಯು(ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್) ಶಿವಮೊಗ್ಗ ಜಿಲ್ಲಾ ಸಂಘಟನಾ ಸಮಿತಿ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ರಾಜ್ಯ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ 2020 ಅನ್ನು ತಿರಸ್ಕರಿಸಬೇಕು. 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸದೇ ಕಾರ್ಮಿಕರ ಪರವಾದ ಕಾನೂನು ಜಾರಿಗೊಳಿಸಬೇಕು. ಬೆಲೆ ಏರಿಕೆ ಆಧಾರದಲ್ಲಿನ ತುಟ್ಟಿಭತ್ಯೆಯೊಂದಿಗೆ ಎಲ್ಲ ವಿಭಾಗಗಳ ಕಾರ್ಮಿಕರಿಗೂ 31 ಸಾವಿರ ರೂ. ಸಮಾನ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
    ಕನಿಷ್ಠ ವೇತನ, ಸಲಹಾ ಮಂಡಳಿ, ಕಾರ್ಮಿಕರ ಕಲ್ಯಾಣ ಮಂಡಳಿ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಕಲ್ಯಾಣ ಮೊದಲಾದ ತ್ರಿಪಕ್ಷೀಯ ಮಂಡಳಿ ಅಥವಾ ಸಮಿತಿಗಳಲ್ಲಿ ಸಿಐಟಿಯು ಪ್ರತಿನಿಧಿಗಳನ್ನು ಸೇರ್ಪಡೆ ಮಾಡಬೇಕು. ರಾಜ್ಯದಲ್ಲಿ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
    ಮಹಿಳೆಯರನ್ನು ರಾತ್ರಿ ಪಾಳಿ ಮತ್ತು ಅಪಾಯಕಾರಿ ಕೆಲಸಗಳಲ್ಲೂ ದುಡಿಸಿಕೊಳ್ಳಲು ನೀಡಿರುವ ರಿಯಾಯಿತಿ ರದ್ದುಗೊಳಿಸಬೇಕು. ಸಾರ್ವಜನಿಕ ಉದ್ದಿಮೆಗಳ ಹಾಗೂ ಸೇವೆಗಳ ಖಾಸಗೀಕರಣದ ನೀತಿಗಳನ್ನು ಕೈಬಿಡಬೇಕು. ಕಾರ್ಮಿಕ ಸಂಘದ ಮಾನ್ಯತೆಗೆ ಹಾಗೂ ಗುತ್ತಿಗೆ ಮುಂತಾದ ತಾತ್ಕಾಲಿಕ ಕಾರ್ಮಿಕರ ಕೆಲಸವನ್ನು ಕಾಯಂಗೊಳಿಸಲು ಶಾಸನ ರೂಪಿಸಬೇಕು. ಎಲ್ಲ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು. ಕರ್ನಾಟಕ ಕಾರ್ಮಿಕ ಅಧ್ಯಯನ ಸಂಸ್ಥೆಯನ್ನು ಬಲಪಡಿಸಿ ಅಭಿವೃದ್ಧಿಪಡಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.
    ಸಮಿತಿ ಜಿಲ್ಲಾ ಸಂಚಾಲಕ ಎಂ.ನಾರಾಯಣ, ಸಹ ಸಂಚಾಲಕಿ ಹನುಮಮ್ಮ, ಶಿವಮೊಗ್ಗ ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಬಂಗಾರಪ್ಪ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಭಾಗ್ಯಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀತಾ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಮುಖಂಡರಾದ ಮುನಿರಾಜು, ಕೆ.ಎಲ್.ರಾವ್, ವೇಲು, ಕೆ.ಪ್ರಭಾಕರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts