ಜೀವನ ಶೈಲಿ ಕ್ಯಾನ್ಸರ್ ರೋಗಕ್ಕೆ ಮೂಲ: ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಹೇಳಿಕೆ

World cancer awareness campaign Mandya
Published on

ಮಂಡ್ಯ: ಭಾರತದಲ್ಲಿ 14.96 ಕೋಟಿ ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, 2040ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುವ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚೆಚ್ಚು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ನಿರ್ದೇಶಕ ಡಾ.ನರಸಿಂಹಸ್ವಾಮಿ ತಿಳಿಸಿದರು.

ನಗರದ ಮಿಮ್ಸ್ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಮಿಮ್ಸ್ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ  ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ರೋಗದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ವರ್ಷ ಫೆ.4ರಂದು ವಿಶ್ವದಾದ್ಯಂತ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕ್ಯಾನ್ಸರ್ ಕೇವಲ ಚಿಕಿತ್ಸೆಯಿಂದ ಮಾತ್ರವಲ್ಲ, ಜನರ ಬೆಂಬಲದಿಂದ ಗೆಲ್ಲಬಹುದು. ಅದನ್ನು ಬೇರುಗಳಿಂದಲೇ ನಿರ್ಮೂಲನೆ ಮಾಡಬೇಕು. ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಅದನ್ನು ಗುಣಪಡಿಸಬಹುದು. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಜನರಿಗೆ ಕ್ಯಾನ್ಸರ್‌ನ ಲಕ್ಷಣಗಳ ಬಗ್ಗೆ ತಿಳಿದಿರುವುದಿಲ್ಲ, ಇದರಿಂದಾಗಿ ರೋಗವು ಮುಂದುವರಿದ ಹಂತವನ್ನು ತಲುಪುತ್ತದೆ ಮತ್ತು ಚಿಕಿತ್ಸೆಯು ಕಷ್ಟಕರವಾಗುತ್ತದೆ. ಆದ್ದರಿಂದ, ಕ್ಯಾನ್ಸರ್ ಜಾಗೃತಿ ಮೂಡಿಸುವುದು ಬಹಳ ಮುಖ್ಯ. ಆಹಾರ ಪದ್ಧತಿ ಮತ್ತು ಜೀವನ ಶೈಲಿ ಬದಲಾವಣೆ ಜತೆಗೆ ತಂಬಾಕು ಸೇವೆಯಿಂದಾಗಿ ಹಲವಾರು ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ಸಂಯೋಜಿತ ಪ್ರಯತ್ನಗಳನ್ನು ಉತ್ತೇಜಿಸಲಾಗುತ್ತಿದೆ ಎಂದರು.

ತಂಬಾಕು ಮತ್ತು ಮದ್ಯ ಸೇವನೆಯು ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಇವುಗಳಿಂದ ದೂರವಿರುವುದರಿಂದ ಕ್ಯಾನ್ಸರ್ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದ ಅವರು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳು ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಅಗತ್ಯ. ದೈಹಿಕ ಚಟುವಟಿಕೆಯಲ್ಲಿ ನಿಯಮಿತ ವ್ಯಾಯಾಮವು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಬೇಕು, ಚರ್ಮದ ಕ್ಯಾನ್ಸರ್ ತಪ್ಪಿಸಲು, ಬಿಸಿಲಿನಲ್ಲಿ ಹೊರಗೆ ಹೋಗುವಾಗ ಸನ್‌ಸ್ಕ್ರೀನ್ ಬಳಸಬೇಕು ಎಂದು ಸಲಹೆ ನೀಡಿದರು.

ಜಾಥಾದಲ್ಲಿ ನಮ್ಮ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ, ಶಸ್ತ್ರ ಚಿಕಿತ್ಸಾ ವಿಭಾಗದ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾ ನಡೆಸಿದರು. ಇದು ಒಂದು ದಿನಕ್ಕೆ ಸೀಮಿತವಾಗದೆ ಮುಂದುವರಿಯಬೇಕು. ರೋಗಿಗಳಿಗೆ ತಿಳಿವಳಿಕೆ ನೀಡಬೇಕು. ಅಗತ್ಯವಿರುವ ಕಡೆಗಳಲ್ಲಿ ಭಿತ್ತಿಪತ್ರಗಳನ್ನು ಅಳವಡಿಸಬೇಕು. ಇದರಿಂದ ಸ್ವಲ್ಪ ಮಟ್ಟಿಗೆ ಕ್ಯಾನ್ಸರ್ ರೋಗ ತಡೆಯಬಹುದು ಎಂದು ಅಭಿಪ್ರಾಯಿಸಿದರು.

ಮಿಮ್ಸ್ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ವೈದ್ಯರ ಸಂಘದ ಅಧ್ಯಕ್ಷ ಡಾ.ಮನೋಹರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net