ರಾಯಚೂರು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವುದು ಪೋಷಕರ ಮೂಲಭೂತ ಹಕ್ಕು ಆಗಿದೆ ಎಂದು ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ.ಸಾತ್ವಿಕ್ ಹೇಳಿದರು.
ನಗರದ ಪಾಲಿಕೆ ಆಯುಕ್ತರ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಘಟಕ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಬಾಲಕಾರ್ಮಿಕ ಯೊಜನೆ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2025ರ ಅಂಗವಾಗಿ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂವಿಧಾನವು ಮಕ್ಕಳಿಗೆ ಶಿಕ್ಷಣ ನೀಡುವುದು ಮೂಲಭೂತ ಹಕ್ಕು ಎಂದು ತಿಳಿಸುತ್ತದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತವಾಗದಂತೆ ಪೋಷಕರು ಎಚ್ಚರವಹಿಸಬೇಕು. 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧವಾಗಿದೆ. ಮಕ್ಕಳಿಗೆ ಶಿಕ್ಷಣ ಒದಗಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು.
ನಂತರ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರಮಾಣ ವಚನ ಬೋಧಿಸಲಾಯಿತು. ಬಾಲಕಾರ್ಮಿಕ ತರಬೇತಿ ಕೇಂದ್ರಗಳಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷ ಮಂಗಳ ಹೆಗಡೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಉಪ ಆಯುಕ್ತರಾದ ಸಿದ್ದಯ್ಯಲಿಂಗಸ್ವಾಮಿ ಹಿರೇಮಠ, ಬಿಇಓ ಈರಣ್ಣ ಕೋಸಗಿ, ಮಂಜುನಾಥ ರೆಡ್ಡಿ, ಅಮರೇಶ, ಮಹ್ಮದ್ ಉಮರ್ ಅಬ್ದುಲ್ ಘನಿ, ಪ್ರಿಯಾಂಕ ಸೇರಿ ಅನೇಕರು ಇದ್ದರು.