More

    ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

    ಮಂಡ್ಯ: ತಂಬಾಕು ಉತ್ಪನ್ನಗಳ ಸೇವೆನೆಯಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಆದ್ದರಿಂದ ತಂಬಾಕು ಸೇವನೆಯ ದುಷ್ಪರಿಣಾಮ ಕುರಿತು ಶಾಲಾ ಮತ್ತು ಕಾಲೇಜಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
    ತಾಲೂಕಿನ ವಿ.ಸಿ ಫಾರ್ಮ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಕೃಷಿ ಮಹಾವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ತಂಬಾಕು ಸೇವನೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದಲ್ಲಿ ನಮಗೆ ಆಹಾರ ಬೇಕು ತಂಬಾಕಲ್ಲ ಎಂಬ ಈ ವರ್ಷದ ಘೋಷ ವಾಕ್ಯದಲ್ಲಿ ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದರು.
    ರಾಜ್ಯದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಜನರು ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಬಳಸಿ ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಇದನ್ನು ತಪ್ಪಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ತಂಬಾಕಿನ ದುಷ್ಪರಿಣಾಮದ ಬಗ್ಗೆ ತಿಳಿದ್ದಿದ್ದರೂ ಜನರು ತಂಬಾಕನ್ನು ಬಳಸಿ ಕ್ಯಾನ್ಸರ್ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ 50 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರರಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಳೆಗಾರರಿಗೆ ಮಾಹಿತಿ ನೀಡಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ತಿಳಿಸಿ ಪರ್ಯಾಯ ಬೆಳೆ ಯಾವುದೆಂದು ತಿಳಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
    ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಲೇಖಕಿ ಡಾ.ನಂದಿನಿಮೂರ್ತಿ, ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಫಾತಿಮಾ, ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ.ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಜಿಲ್ಲಾ ಆಶ್ರಿತ ರೋಗವಾಹಕಗಳ ನಿಯಂತ್ರಣಾಧಿಕಾರಿ ಡಾ.ಭವಾನಿಶಂಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts