More

    ಪುನರ್ವಸತಿ ಕೇಂದ್ರಗಳಲ್ಲಿ ಪರಿಸರ ಬೆಳೆಸಿ

    ಬಾಗಲಕೋಟೆ: ಜಿಲ್ಲೆಯ ಪುನರ್ವಸತಿ ಕೇಂದ್ರಗಳಲ್ಲಿ ಸರ್ಕಾರಕ್ಕೆ ಸೇರಿದ ಸಾಕಷ್ಟು ಜಾಗ ಇದೆ. ಸುಸಜ್ಜಿತವಾಗಿ ಗ್ರಾಮಗಳನ್ನು ನಿರ್ಮಿಸಲಾಗಿದೆ. ಅರಣ್ಯ ಇಲಾಖೆಯಿಂದ ಪುನರ್ವಸತಿ ಕೇಂದ್ರಗಳಲ್ಲಿ ಸಸಿಗಳನ್ನು ನೆಟ್ಟು ಪರಿಸರ ಬೆಳಸಲು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಆಡಳಿತ ಅಧಿಕಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮೇ ತಿಂಗಳ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಅರಣ್ಯ ಇಲಾಖೆ ಯೋಜನೆಯಡಿ ಹಾಗೂ ನರೇಗಾದಡಿಯಲ್ಲಿ ಜಿಲ್ಲೆಯಲ್ಲಿರುವ ಪ್ರತಿಯೊಂದು ಪುನರ್ವಸತಿ ಕೇಂದ್ರದಲ್ಲಿ ಸ್ಮಶಾನ ಹಾಗೂ ಸರ್ಕಾರಕ್ಕೆ ಸೇರಿದ ಖಾಲಿ ಜಾಗದಲ್ಲಿ ವಿವಿಧ ತರಹದ ಸಸಿಗಳನ್ನು ನೆಡಲು ಕ್ರಿಯಾ ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.

    ಇನ್ನು ಜಿಲ್ಲೆಯಲ್ಲಿ 22 ಕೆರೆಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಅವುಗಳ ಅಭಿವೃದ್ಧಿಗೆ ಕ್ರಮವಹಿಸಬೇಕು. ಕೂಡಲಸಂಗಮ ಕ್ಷೇತ್ರದಲ್ಲಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಸಿಗಳನ್ನು ಬೆಳೆಸಲು ಪ್ರತ್ಯೇಕವಾದ ಜಾಗವಿದ್ದು, ಅಲ್ಲಿ ಔಷಧಯುಕ್ತ ಗಿಡಗಳನ್ನು ಬೆಳೆಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಲ್ಲಣ್ಣ ತೋಟದ ಅವರಿಗೆ ಸೂಚಿಸಿದರು.

    ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಹುಲ್‌ಕುಮಾರ ಬಾವಿದಡ್ಡಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ನೀಡಿರುವ ಗುರಿಯನ್ವಯ ಕಾರ್ಯನಿರ್ವಹಿಸಲಾಗುತ್ತಿದೆ. ಲಾಕ್‌ಡೌನ್ ವೇಳೆ ತೋಟಗಾರಿಕೆ ಬೆಳೆಗಳು ಮಾರಾಟವಾಗದೆ ರೈತರು ಪರದಾಡುತ್ತಿದ್ದರು. ಇಲಾಖೆಯಿಂದ ಸಹಾಯವಾಣಿ ಸ್ಥಾಪಿಸಿ ರೈತರು, ವ್ಯಾಪಾರಸ್ಥರ ನಡುವೆ ಸಂಪರ್ಕ ಕಲ್ಪಿಸಲಾಯಿತು. ಅಲ್ಲದೆ, ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದರು.

    ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ ಗುರಿಗಿಂತ ಶೇ.113 ರಷ್ಟು ಪ್ರಗತಿ ಸಾಧಿಸಲಾಗಿದೆ. ಆರ್ಥಿಕ ಪ್ರಗತಿಯಲ್ಲಿ ಶೇ.90 ರಷ್ಟು ಸಾಧನೆಯಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ವಲಸೆಯಿಂದ ಬಂದ ಕಾರ್ಮಿಕರಿಗೆ ಹೊಸದಾಗಿ ಜಾಬ್ ಕಾರ್ಡ್ ನೀಡಲಾಗಿದೆ. 4200 ವಲಸೆ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ಹೇಳಿದರು.

    ನಂತರ ಸಣ್ಣ ನೀರಾವರಿ, ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಪಾಲನೆ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಮಾಡಿದರು. ಎಸ್ಪಿ ಲೋಕೇಶ ಜಗಲಾಸರ್, ಜಿಪಂ ಸಿಇಒ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳ್ಳಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಸೀಲ್ದಾರರು ಉಪಸ್ಥಿತರಿದ್ದರು.

    ಅಗತ್ಯಕ್ಕೆ ತಕ್ಕಂತೆ ಬೀಜ, ಗೊಬ್ಬರ ಪೂರೈಸಿ
    ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ 2,65,000 ಹೆಕ್ಟೇರ್ ವಿವಿಧ ಬೆಳೆಗಳನ್ನು ಬೆಳೆಯುವ ಗುರಿ ಹೊಂದಲಾಗಿದೆ. ಈಚೆಗೆ 67,653 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಳೆದ 15 ದಿನಗಳಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯಲ್ಲಿ ಒಟ್ಟು 18 ರೈತ ಸಂಪರ್ಕ ಕೇಂದ್ರ ಹಾಗೂ 9 ಹೆಚ್ಚುವರಿ ಬೀಜ ವಿತರಣೆ ಕೇಂದ್ರಗಳ ಮೂಲಕ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

    ಈ ವೇಳೆ ಶಿವಯೋಗಿ ಕಳಸದ ಪ್ರತಿಕ್ರಿಯೆ ನೀಡಿ, ಬೀಜ, ಗೊಬ್ಬರ ಅಗತ್ಯಕ್ಕೆ ತಕ್ಕಂತೆ ಪೂರೈಸಬೇಕು. ಯಾವುದೇ ರೀತಿಯಿಂದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಳಪೆ, ಹೆಚ್ಚಿನ ಬೆಲೆಗೆ ರಸಗೊಬ್ಬರ, ಬೀಜ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts