More

    ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ: ಯಡಿಯೂರಪ್ಪ

    ಬೆಳಗಾವಿ: ಮೂರು ತಿಂಗಳಲ್ಲಿ ಎದುರಾಗುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಪಡೆದು ಮತ್ತೆ ಅಧಿಕಾರಕ್ಕೇರುತ್ತದೆ. ಈ ನಿಟ್ಟಿನಲ್ಲಿ ಅಮಿತ್ ಷಾ ಅವರು ನಮಗೆ ಮಾರ್ಗದರ್ಶನ ಮಾಡಿದ್ದಾರೆ. ನಾನೇ ಮುಂದಿನ ಮುಖ್ಯಮಂತ್ರಿ ಎಂದು ಯಾರೋ ತಿರುಕನ ಕನಸು ಕಾಣುತ್ತಿದ್ದಾರೆ, ಅದು ನನಸಾಗುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್‌ಗೆ ಚಾಟಿ ಬೀಸಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ನಾವೆಲ್ಲರೂ ಕುಳಿತು ಚರ್ಚೆ ಮಾಡಿ ನಂತರವೇ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಒಂದಲ್ಲ, ಎರಡು ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ. ಇದರಲ್ಲಿ ನಾವು ಯಾವುದೇ ಕಾಂಪ್ರಮೈಸ್ ಮಾಡುವುದಿಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕುತ್ತೇವೆ. ಗೆಲ್ಲುವ ಪಕ್ಷಕ್ಕೆ, ಅಧಿಕಾರ ರಚಿಸುವ ಪಕ್ಷಕ್ಕೆ ಆಕಾಂಕ್ಷಿಗಳ ಸಂಖ್ಯೆಯೂ ಬಹಳಷ್ಟು ಇರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಈಗಾಗಲೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾನೇನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ವಾಜಪೇಯಿ ಪಿಎಂ ಆಗಿದ್ದಾಗ ನನ್ನನ್ನು ಆಹ್ವಾನಿಸಿದ್ದರು. ಪಕ್ಷ ಈಗ ರಾಜ್ಯದಲ್ಲಿ ನನಗೆ ಎಲ್ಲ ಸ್ಥಾನಮಾನ, ಅಧಿಕಾರ, ಗೌರವ ನೀಡಿದೆ. ಅದರ ಋಣ ತೀರಿಸುವ ಜವಾದ್ಬಾರಿ ನನ್ನದು. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ನಾನು ಈಗಾಗಲೇ ತೀರ್ಮಾನ ಮಾಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಈಗಾಗಲೇ ನನಗೆ 80 ವರ್ಷ ಆಗುತ್ತಿದೆ. ಪಕ್ಷ ಕಟ್ಟಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಈಗಾಗಲೇ ಪುತ್ರರಾದ ರಾಘವೇಂದ್ರ ಎಂಪಿ ಇದ್ದಾರೆ. ವಿಜಯೇಂದ್ರ ಕೂಡ ರಾಜ್ಯದ ಪ್ರವಾಸ ಮಾಡುತ್ತಿದ್ದಾರೆ. ವಿಜಯೇಂದ್ರ ಯುವಕರಿದ್ದು ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ. ವಿಜಯೇಂದ್ರ ಜತೆಗೆ ನಾನೂ ಓಡಾಡುತ್ತಿದ್ದೇನೆ, ನಾನೇನು ಇನ್ನೂ ನಿವೃತ್ತಿ ಆಗಿಲ್ಲ. ಈ ಚುನಾವಣೆಯಲ್ಲಿ ಓಡಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದಕ್ಕೆ ಶ್ರಮಿಸುತ್ತೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts