ಯಲಬುರ್ಗಾ: ಒಳಮೀಸಲಾತಿ ವರ್ಗೀಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ತಿರಸ್ಕರಿಸಿ, ಕಾಂತರಾಜು ಆಯೋಗದ ವರದಿ ಬಹಿರಂಗ ಪಡಿಸುವಂತೆ ಗೋರ್‌ಸೇನಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಳೂಟಗಿ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿ ಒಳಮೀಸಲಾತಿಯ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಸಪ್ತಪೀಠ ತೀರ್ಪು ನೀಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಾಗಿ ಅವೈಜ್ಞಾನಿಕ, ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶ ಆಧರಿಸಿ ಒಳಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿರುವುದು ಸಾಮಾಜಿಕ ನ್ಯಾಯದ ಕಗ್ಗೊಲೆಯಾಗಿದೆ ಎಂದರು.
ಭೋವಿ ಸಮಾಜದ ತಾಲೂಕು ಅಧ್ಯಕ್ಷ ದುರಗಪ್ಪ ಕರಮುಡಿ ಮಾತನಾಡಿ, ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕುರಿತಾದ ಸಮಗ್ರ ಹಾಗೂ ವಸ್ತುನಿಷ್ಠ ಅಂಕಿ-ಅಂಶಗಳ ಕುರಿತಾದ ಕೊರತೆ ಇದ್ದು, ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳದೆ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣ ನಿರ್ಧಾರ ಸರಿಯಲ್ಲ. ಈ ಬಗ್ಗೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಹೇಳಿದರು.
ಭೋವಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ಭೀಮಪ್ಪ ವಡ್ಡರ, ತಾಲೂಕು ಪ್ರಧಾನ ಕಾರ್ಯದರ್ಶಿ ಗಣೇಶ ವಡ್ಡರ, ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕೋಳಿಹಾಳ, ಕುಳುವ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ ಭಜಂತ್ರಿ, ಮುಖಂಡರಾದ ಪರಶುರಾಮ ಚವ್ಹಾಣ, ಹುಲಗಪ್ಪ ಪೂಜಾರ, ವಿಶ್ವನಾಥ ಕುಣಕೇರಿ, ಕುಮಾರ ಬಳಗೇರ ಇತರರಿದ್ದರು.