ರಾಜ್ಯದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ

ವಿಜಯವಾಣಿ ಸುದ್ದಿಜಾಲ ಬೈಂದೂರು
ಆತ್ಮಹತ್ಯೆ ಮಾಡಿಕೊಂಡ 194 ಮಂದಿಯ ಶವಸಂಸ್ಕಾರಕ್ಕೆ ಬಿಡುಗಡೆ ಮಾಡಿದ್ದ ಹಣವನ್ನು ರೈತರ ಸಾಲಮನ್ನಾಕ್ಕೆ ಹೊಂದಿಸಲು ವಾಪಾಸ್ ಪಡೆದಿರುವುದು ಸರಿಯಲ್ಲ. ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ‌್ಯ ನಡೆಯುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.
ಶಿವಮೊಗ್ಗ ಲೋಕಸಭಾ ಉಪಚುನಾವಣೆ ಹಿನ್ನೆಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಂಡ್ಸೆ ಸಮೀಪದ ನೆಂಪುವಿನಲ್ಲಿ ಗುರುವಾರ ಬೃಹತ್ ಕಾರ‌್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ವಿಧಾನಸೌಧದಲ್ಲಿ ಮಂತ್ರಿಗಳು ಸಿಗುತ್ತಿಲ್ಲ. ಅಭಿವೃದ್ಧಿ ಬಗ್ಗೆ ಗಮನ ಹರಿಸುವವರೇ ಇಲ್ಲ. 40-50 ಮಂದಿ ಶಾಸಕ ಹಾಗೂ ಮಂತ್ರಿಗಳು ಪ್ರತಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದಾರೆ. ಉಪಚುನಾವಣೆ ಮುಗಿಯುವವರೆಗೂ ವಿಧಾನಸೌಧ ಬಾಗಿಲು ಹಾಕುವುದು ಒಳಿತು ಎಂದು ಯಡಿಯೂರಪ್ಪ ಟೀಕಿಸಿದರು.
ಲೋಕಸಭಾ ಉಪಚುನಾವಣೆಯನ್ನು ಇಡೀ ದೇಶ ಗಮನಿಸುತ್ತಿದೆ. ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಗೆದ್ದಾಗಿದೆ. ಮಂಡ್ಯ ಕ್ಷೇತ್ರವನ್ನು ಗೆಲ್ಲುವ ವಿಶ್ವಾಸವಿದೆ. ಎಲ್ಲ ಕ್ಷೇತ್ರದಲ್ಲಿಯೂ ದೊಡ್ಡ ಅಂತರದಲ್ಲಿ ಗೆಲ್ಲುವುದು ನಮ್ಮ ಗುರಿ. ಈ ಚುನಾವಣೆಯು ಮುಂಬರುವ ಲೋಕಸಭಾ ಚುನಾವಣೆಗೆ ನಾಂದಿ ಎಂದರು.
ಶಿವಮೊಗ್ಗ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಭಟ್ಕಳ ಶಾಸಕ ಸುನೀಲ್ ನಾಯ್ಕ, ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಮಾತನಾಡಿದರು.

ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾಕ್ಕೆ ಸಹಕಾರ ನೀಡುತ್ತಿಲ್ಲ ಎಂಬ ಸಿಎಂ ಹೇಳಿಕೆ ಸರಿಯಲ್ಲ. ರಾಜ್ಯ ಸರ್ಕಾರದ ಬೊಕ್ಕಸದಿಂದ ಸಾಲಮನ್ನಾ ಮಾಡುವುದಾದರೆ ಪ್ರಧಾನಿ ಮೋದಿ ಅಡ್ಡಿ ಮಾಡುವುದಿಲ್ಲ. ಸುಮ್ಮನೆ ಪ್ರಧಾನಿ ಬಗ್ಗೆ ಮಾತನಾಡುವ ಬದಲು ತಮಗೆ ಯೋಗ್ಯತೆಯಿಲ್ಲ ಎಂಬುದನ್ನು ಒಪ್ಪಿಕೊಳ್ಳಲಿ. ಸುಳ್ಳು ಹೇಳಿ ಜನರನ್ನು ವಂಚಿಸಬೇಡಿ.
– ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ