ಯಲಬುರ್ಗಾ: ಕುಕನೂರಿನ ಎಪಿಎಂಸಿ ಆವರಣದಲ್ಲಿ ಫೆ.8 ರಂದು ಸಹಕಾರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ ಉಳ್ಳಾಗಡ್ಡಿ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಹಕಾರಿ ಸಂಘಗಳು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳವ ಸಲುವಾಗಿ ಶಾಸಕ ಬಸವರಾಜ ರಾಯರೆಡ್ಡಿ ಅವರು ಸಮಾವೇಶ ಆಯೋಜನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಐತಿಹಾಸಿಕ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದ್ದು, ಅವುಗಳ 0ಜಾರಿಗೆ ರಾಜ್ಯ-ಕೇಂದ್ರ ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸಲಾಗುವುದು ಎಂದರು.
ಸಹಕಾರ ಸಚಿವ ಕೆಎನ್ ರಾಜಣ್ಣ ಉದ್ಘಾಟಿಸುವರು. ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಸಹಕಾರ ವಾರಪತ್ರಿಕೆ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸುವರು. ವಸ್ತು ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುವರು. ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಸಹಕಾರಿ ಪಿತಾಮಹ ಸಿದ್ದನಗೌಡ ರಾಮನಗೌಡ ಪಾಟೀಲ್ ಅವರ ಭಾವಚಿತ್ರಕ್ಕೆ ಜಿ.ಟಿ.ದೇವೇಗೌಡ ಮಾಲಾರ್ಪಣೆ ಮಾಡಲಿದ್ದಾರೆ. ಸಮಾವೇಶದಲ್ಲಿ ಹಿರಿಯ ಸಹಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.