Vinay Kulkarni : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಇಂದು (ಜೂನ್ 13) ನ್ಯಾಯಾಲಯದ ಮುಂದೆ ಹಾಜರಾದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚನೆ ನೀಡಿತ್ತು. ಹೀಗಾಗಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ವಿನಯ್ ಕುಲಕರ್ಣಿ ಅವರು ಹಾಜರಾಗಿದ್ದರು. ಈ ವೇಳೆ ಅವರನ್ನು ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪದ ಮೇಲೆ 2020 ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿತ್ತು. ಬಳಿಕ ಜೈಲಿನಲ್ಲಿದ್ದ ವಿನಯ್ ಅವರಿಗೆ ಒಂದು ಹಂತದಲ್ಲಿ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ, ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಶರಣಾಗುವಂತೆ ಆದೇಶಿಸಿತ್ತು.
ಮೊನ್ನೆಯಷ್ಟೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ವಿನಯ್ ಕುಲಕರ್ಣಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಲೇಬೇಕು. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗುತ್ತೇನೆ. ಕೆಲವರು ನನ್ನನ್ನು ಕಾಡುತ್ತಲೇ ಇದ್ದಾರೆ. ಕಷ್ಟದಲ್ಲಿ ಇರುವುದನ್ನು ನೋಡಿ ಖುಷಿ ಪಡುವವರಿಗಿಂತ ಹೆಚ್ಚು ಜನ ದುಃಖಿಸುತ್ತಿದ್ದಾರೆ ಎಂದು ಭಾವುಕರಾಗಿ ಹೇಳಿದರು. ಅಲ್ಲದೆ, ಕೆಲವರ ಷಡ್ಯಂತ್ರದಿ0ದ ಕ್ಷೇತ್ರಕ್ಕೆ ಕಾಲಿಡದಂತೆ ಅಸಹಾಯಕನಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.
ಏನಿದು ಪ್ರಕರಣ?
2016ರ ಜೂನ್ 15ರಂದು ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ತನ್ನದೇ ಮಾಲೀಕತ್ವದ ಉದಯ ಜಿಮ್ಗೆ ಎಂದಿನಂತೆ ಬಂದ ಯೋಗೀಶಗೌಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಘಟನೆಗೆ ಮುನ್ನ ಮತ್ತು ಘಟನೆ ನಂತರ ವಿನಯ್ ಕುಲಕರ್ಣಿ ದೆಹಲಿಗೆ ಪ್ರವಾಸ ಮಾಡಿದ್ದರು. ಘಟನೆ ವೇಳೆ ತಾನು ಜಿಲ್ಲಾ ಕೇಂದ್ರದಲ್ಲಿ ಇರಲೇ ಇಲ್ಲ. ರಾಜಧಾನಿ ಮತ್ತು ದೆಹಲಿ ಮಧ್ಯೆ ಪ್ರವಾಸ ಮಾಡುತ್ತ ಏನೋ ಪ್ರಮುಖ ಕೆಲಸದಲ್ಲಿ ತೊಡಗಿಕೊಂಡಿದ್ದೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪವಿದೆ. 2016ರ ಜೂ. 12ರಂದು ದೆಹಲಿಗೆ ತೆರಳಿದ್ದ ಕುಲಕರ್ಣಿ 13ರಂದು ಬೆಂಗಳೂರಿಗೆ ವಾಪಸಾಗಿದ್ದರು. ಜೂ. 16ರಂದು ಪುನಃ ದೆಹಲಿಗೆ ತೆರಳಿ 18ರಂದು ರಾಜಧಾನಿಗೆ ವಾಪಸಾಗಿದ್ದರು. ಪ್ರಯಾಣದ ದಿನವೇ ವಿಮಾನ ಟಿಕೆಟ್ ಪಡೆಯಲಾಗಿತ್ತು ಎಂಬುದನ್ನು ಸಿಬಿಐ ದಾಖಲೆ ಸಹಿತವಾಗಿ ಖಚಿತ ಪಡಿಸಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ.