ಸಂಸ್ಕೃತಿ ರಕ್ಷಣೆಯಲ್ಲಿ ಯುವಕರ ಪಾತ್ರ ಹಿರಿದು

ಹಾಸನ: ಭಾರತೀಯ ಸಂಸ್ಕೃತಿ, ಆಚಾರ ವಿಚಾರವನ್ನು ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ಹೆಚ್ಚಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಯುವಕರ ಸಂಘ ಹಾಗೂ ಹೊಯ್ಸಳ ಜಾನಪದ ಕಲಾ ಸಂಸ್ಥೆ ವತಿಯಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವಕರು ನಾಟಕ, ನೃತ್ಯ, ಜನಪದ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಬೇಕು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯರಾಗಬೇಕು. ಯುವಕರ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನಾಗರಾಜ್ ಮಾತನಾಡಿ, ಯುವ ಜನರಲ್ಲಿರುವ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಯುವಕರು ಇಂತಹ ವೇದಿಕೆಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.
ಎ.ವಿ.ಕೆ. ಕಾಲೇಜು ಉಪನ್ಯಾಸಕ ಸೀ.ಚ.ಯತೀಶ್ವರ್ ಮಾತನಾಡಿ, ಯುವಕರು ಜೀವನದಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕೆಂದರೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಅರಿಯಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ವಾಮರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಮಂಜುನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಒ.ಮಹಂತಪ್ಪ, ಎಚ್.ಎಂ.ದಿನೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್ ಎಂ.ಸರಶೆಟ್ಟಿ, ಬಿ.ಟಿ.ಮಾನವ ಹಾಗೂ ಇತರರು ಇದ್ದರು.